ಮಂಗಳೂರಿನ ಮಾಜಿ ಸಂಸದ, ಮಾಜಿ ಕೇಂದ್ರ ಸಚಿವ ಧನಂಜಯ್ ಕುಮಾರ್ ಇನ್ನಿಲ್ಲ

ಕರಾವಳಿ ಕರ್ನಾಟಕ ವರದಿ

ಮಂಗಳೂರು
: ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಕೇಂದ್ರದ ಮಾಜಿ ಸಚಿವ, ಹಿರಿಯ ರಾಜಕಾರಣಿ ಧನಂಜಯ್ ಕುಮಾರ್ (67) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ವಿಧಿವಶರಾಗಿದ್ದಾರೆ.

ಧನಂಜಯ್ ಕುಮಾರ್ ಅವರು ಬಹುಅಂಗಾಂಗ ವೈಫಲ್ಯದಿಂದಾಗಿ ಕೆಲವು ತಿಂಗಳಿನಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಕೊನೆಯುಸಿರೆಳೆದಿರುವುದಾಗಿ ವರದಿ ತಿಳಿಸಿದೆ.

ಮಂಗಳೂರಿನ ಕದ್ರಿ ಕಂಬಳದಲ್ಲಿರುವ ನಿವಾಸದಲ್ಲಿ ಮಂಗಳವಾರ ಬೆಳಗ್ಗೆ 7ರಿಂದ 10ಗಂಟೆವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಿದ್ದು, ಹುಟ್ಟೂರಾದ ವೇಣೂರಿನಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ದಕ್ಷಿಣ ಕನ್ನಡದ ವೇಣೂರಿನಲ್ಲಿ 1951 ಜುಲೈ 4ರಂದು ಜನಿಸಿದ್ದ ಧನಂಜಯ್ ಕುಮಾರ್ ಜನಿಸಿದ್ದರು. ಪದವಿ ಶಿಕ್ಷಣದ ನಂತರ ವಕೀಲರಾಗಿದ್ದರು. ಭಾರತೀಯ ಜನತಾ ಪಕ್ಷದ ವಿದ್ಯಾರ್ಥಿ ಘಟಕದ ಮೂಲಕ ರಾಜಕೀಯ ಜೀವನ ಆರಂಭಿಸಿದ್ದರು. 1983ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. 1991ರಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿ.ಜನಾರ್ದನ ಪೂಜಾರಿ ಅವರನ್ನು ಸೋಲಿಸಿ ಸಂಸದರಾಗಿ ಆಯ್ಕೆಯಾಗಿದ್ದರು.

ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಧನಂಜಯ್ ಕುಮಾರ್ 1996ರಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾಗಿ, 1999ರಲ್ಲಿ ಕೇಂದ್ರದ ಹಣಕಾಸು ಖಾತೆ ರಾಜ್ಯ ಸಚಿವರಾಗಿ, 2000ರಲ್ಲಿ ಕೇಂದ್ರದ ಜವಳಿ ಖಾತೆ ರಾಜ್ಯ ಸಚಿವರಾಗಿದ್ದರು.

ಧನಂಜಯ್ ಕುಮಾರ್ ಅವರು ಬಿಎಸ್ ಯಡಿಯೂರಪ್ಪನವರ ಕಟ್ಟಾ ಬೆಂಬಲಿಗರಾಗಿದ್ದರು. ಬಿಎಸ್ ವೈ ಕೆಜೆಪಿ ಸ್ಥಾಪಿಸಿದಾಗ ಅವರಿಗೆ ಸಾಥ್ ನೀಡಿದ್ದರು. ಬಳಿಕ ಯಡಿಯೂರಪ್ಪ ಬಿಜೆಪಿಗೆ ವಾಪಸ್ ಆದ ಬಳಿಕ ಧನಂಜಯ್ ಕುಮಾರ್ ಅವರು ಜೆಡಿಎಸ್ ಗೆ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡಿದ್ದರು.


 

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ